ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಂತಹ ಪುಣ್ಯ ಕ್ಷೇತ್ರದಲ್ಲಿ ಯಾತ್ರೆ ಪ್ರಾರಂಭವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಖಂಡಿತವಾಗಿಯೂ ಗೆಲ್ಲಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯ ಸಂಕಲ್ಪ ಯಾತ್ರೆಗೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿ ಮಾತನಾಡಿದರು. ಆದಿವಾಸಿ ಸಮುದಾಯದ ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಮಾಡಿದ್ದೇವೆ. ಈ ಪ್ರದೇಶದ ಚಿತ್ರಣ ಬದಲಿಸೋದೇ ನಮ್ಮ ಸಂಕಲ್ಪ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ. ಸಿಎಂ ಬೊಮ್ಮಾಯಿ ಯವರು ಉತ್ತಮ ಆಡಳಿತ ನೀಡುತ್ತಿದ್ದಾರೆ, ಮೋದಿ ಬಂದ ಮೇಲೆ ಸಬ್ ಕಾ ಸಾಥ್ ಸಬ್ ಕ ವಿಕಾಸ್ ಶುರುವಾಗಿದೆ. ದೇಶ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, ದಲಿತ, ಹಿಂದುಳಿದ ವರ್ಗಗಳ ಪ್ರಗತಿಗೆ ಮೋದಿ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದರು.
ಅಂದಹಾಗೆ ರಾಜ್ಯ ಮತ್ತು ಕೇಂದ್ರ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ದೃಷ್ಟಿಯಿಂದ ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ರಥ ಯಾತ್ರೆ ಮಾಡಲಿದೆ.